ದಾವಣಗೆರೆ: ಜಿಲ್ಲಾಡಳಿತದ ವತಿಯಿಂದ ನವೆಂಬರ್ ನ.1 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ಜರುಗಲಿದೆ. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.
ಇದಕ್ಕೂ ಮುನ್ನ ಬೆಳಿಗ್ಗೆ 8.30 ಕ್ಕೆ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಆವರಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಗುವುದು. ಕಲಾ ತಂಡಗಳೊಂದಿಗೆ ಮೆರವಣಿಗೆಯು ಮಹಾನಗರಪಾಲಿಕೆ ಮುಂಭಾಗದಿಂದ ಗಾಂಧಿ ವೃತ್ತ, ಅಶೋಕ ರಸ್ತೆ, ಜಯದೇವ ವೃತ್ತ, ವಿದ್ಯಾರ್ಥಿ ಭವನದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದ ತಲುಪಲಿದೆ.
ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ, ಎಸ್.ಎಲ್.ಭೋಜೇಗೌಡ, ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಉಪಸ್ಥಿತರಿರುವರು.ಸಂಜೆ 06 ಗಂಟೆಗೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದೊಂದಿಗೆ ನಗರದ ಗಾಜಿನ ಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.



