ದಾವಣಗೆರೆ: ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕನಾಗಿ ಆಯ್ಕೆಯಾಗಿದ್ದು ಸಂತಸ ತಂದಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಆಡಳಿತ ಪಕ್ಷ ಎಚ್ಚರಿಸುವ ಕೆಲಸ ಮಾಡುತ್ತೇನೆ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಹೇಳಿದ್ದಾರೆ.
ಪಾಲಿಕೆಯ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ ಸೇರಿದಂತೆ ನಾಯಕರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ, ನಿಷ್ಠೆಯಿಂದ ಮಾಡುತ್ತೇನೆ ಎಂದರು.
ಏನೇ ಸಮಸ್ಯೆ ಇದ್ದರೂ ಜನರು ನನ್ನ ಬಳಿ ಬಂದು ಹೇಳಿಕೊಳ್ಳಲಿ. ಅದಕ್ಕೆ ಪರಿಹಾರ ಒದಗಿಸಲು ಶ್ರಮಿಸುತ್ತೇನೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಜಟಿಲವಾಗುತ್ತದೆ. ಈಗಿನಿಂದಲೇ ಜನರಿಗೆ ಸಮರ್ಪಕವಾಗಿ ನೀರು ಪೂರೈಸಲು ವಿಶೇಷ ಕಾಳಜಿ ವಹಿಸಬೇಕು. ಜೊತೆಗೆ ಸ್ಮಾರ್ಟ್ ಸಿಟಿಗೆ ನೂರಾರು ಕೋಟಿ ರೂಪಾಯಿ ಬಿಡುಗಡೆ ಆಗಿದೆ. ಅಲ್ಲಲ್ಲಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಜನರಿಗೆ ಸಮಸ್ಯೆಯಾಗುತ್ತಿದೆ. ಆದಷ್ಟು ಬೇಗ ಅಗೆದಿರುವ ಗುಂಡಿ ಮುಚ್ಚಿಸಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಚುರುಕು ನೀಡಬೇಕು ಎಂದರು.
ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿದ್ದ ಎ. ನಾಗರಾಜ್ ಅವರು ಗಡಿಗುಡಾಳ್ ಮಂಜುನಾಥ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪಾಲಿಕೆ ಸದಸ್ಯರಾದ ಚಮನ್ ಸಾಬ್, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



