ದಾವಣಗೆರೆ: ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಜಿಲ್ಲೆಯ ಪ್ರಮುಖ ಬೆಳೆಯಾಗಿದೆ. ಉತ್ತಮ ಮಳೆಯಾಗಿದ್ದರಿಂದ ಜಿಲ್ಲಾದ್ಯಂತ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. 15ರಿಂದ 20 ದಿನದ ಮೆಕ್ಕೆಜೋಳ ಬೆಳೆಗಳಿದ್ದು, ಲದ್ದಿಹುಳು (ಸೈನಿಕ ಹುಳು) ಬಾಧೆ ಕಂಡುಬಂದಿದೆ. ಈ ಹಿನ್ನೆಲೆ ಕೆಲ ರೈತರ ಜಮೀನುಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೆಕ್ಕೆಜೋಳ ಬೆಳೆ ಸೈನಿಕ ಹುಳುವಿನ ಬಾಧೆ ತೀವ್ರತೆ ಕಂಡುಬಂದಿದೆ. ಬೆಳೆದ ಹುಳುವಿನ ಕಪ್ಪು ತಲೆಯ ಮುಂಭಾಗದಲ್ಲಿ ತಲೆಕೆಳಗಾದ ”ವೈ” ಆಕೃತಿಯ ಗುರುತು ಹಾಗೂ ಹುಳದ ಹಿಂಭಾಗದಲ್ಲಿ 4 ದಟ್ಟವಾದ ಕಂದುಬಣ್ಣದ ಚುಕ್ಕೆಗಳು ಚೌಕಾಕಾರದಲ್ಲಿ ಕಂಡುಬರುತ್ತವೆ. ಹುಳುಗಳು ಎಲೆಗಳನ್ನು ಕೆರೆದು ತಿನ್ನುವುದರಿಂದ ನೀಳ, ಚಿಂದಿಯಂತಾದ ರಂಧ್ರಗಳು ಕಾಣಿಸಿಕೊಳ್ಳುತ್ತವೆ. ಎಲೆಸುಳಿ ತಿಂದು ಹಾಳುಮಾಡುತ್ತವೆ. ಆ ಸುಳಿಯಲ್ಲಿ ತೇವದಿಂದ ಕೂಡಿದ ಕಂದು ಬಣ್ಣದ ಹಿಕ್ಕೆಗಳನ್ನು ಕಾಣಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಲದ್ದಿಹುಳು ಹತೋಟಿ ಕ್ರಮಗಳು: ಲದ್ದಿಹುಳು ಕಂಡುಬಂದ ಕಡೆಗಳಲ್ಲಿ ರೈತರು ಕೃಷಿ ಇಲಾಖೆ ಸೂಚಿಸುವ ಕ್ರಮಗಳನ್ನು ಕೈಗೊಳ್ಳಬೇಕಿದೆ. ಮುಸುಕಿನ ಜೋಳದ ಜೊತೆ ತೊಗರಿಯನ್ನು ಮಿಶ್ರಬೆಳೆಯಾಗಿ ಬಿತ್ತಬೇಕು. ಸಮತೋಲನ ರಾಸಾಯನಿಕ ಗೊಬ್ಬರ ಬಳಸಬೇಕು. ಮೊಟ್ಟೆಗಳ ಗುಂಪು ಹಾಗೂ ಮೊದಲ ಹಂತದ ಮರಿಗಳಿರುವ ಎಲೆಗಳನ್ನು ಕಿತ್ತು ನಾಶಪಡಿಸಬೇಕು. ಪ್ರತಿ ಎಕರೆಗೆ 30 ಪಕ್ಷಿ ಸೂಚಿಗಳನ್ನು ನೆಡಬೇಕು.
30 ದಿನಗಳ ಬೆಳೆಯಲ್ಲಿ ಪ್ರತಿ ಎಕರೆಗೆ 15ರಂತೆ ಮೋಹಕ ಬಲೆಗಳನ್ನು ಅಳವಡಿಸಬೇಕು. ತತ್ತಿಗಳ ಪರತಂತ್ರ ಜೀವಿಯಾದ ಟ್ರೈಕೊಗ್ರಾಮ ಪ್ರೀಟಿಯೋಸಮ್ ಪ್ರತಿ ಎಕರೆಗೆ 50,000ದಂತೆ (3 ಟ್ರೈಕೋಕಾರ್ಡ್) ನಿರ್ಧರಿತ ಅಂತರದಲ್ಲಿ ಬೆಳೆಗಳಲ್ಲಿ ಬಿಡಬೇಕು. ಮೆಟರೈಜೀಂ ಅನಿಸೋಪ್ಲಿಯೆ (1್ಠ108 ಸಿಎಫ್‌ಯು/ಗ್ರಾಂ) 5 ಗ್ರಾಂ. ಪ್ರತಿ ಲೀಟರ್ ನೀರಿಗೆ ಅಥವಾ ನ್ಯೂಮೋರಿಯಾ ರಿಲೈ (108 ಸಿಎಫ್‌ಯು/ಗ್ರಾಂ) ಅನ್ನು 3 ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸುಳಿಗೆ ಸಿಂಪರಣೆ ಮಾಡಬೇಕು.
ಲದ್ದಿ ಹುಳುವಿನಿಂದ ಶೇ.10ರಷ್ಟು (ಪ್ರತಿ 100 ಗಿಡಗಳಿಗೆ 10 ಗಿಡಗಳು) ಹಾನಿಯಾಗಿದ್ದಲ್ಲಿ ಶೇ.5ರ ಬೇವಿನ ಕಷಾಯ (ಅಜಾಡಿರಕ್ಟಿನ್ 1500 ಪಿಪಿಎಂ) 5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.ಲದ್ದಿ ಹುಳುವಿನಿಂದ ಶೇ.20ರಷ್ಟು ಹಾನಿಯಾಗಿದ್ದಲ್ಲಿ ಎಮಾಮೆಕ್ಟಿನ್ ಬೆಂಜೋಯೇಟ್ ಶೇ.5 ಎಸ್.ಜಿ ಅನ್ನು 0.4 ಗ್ರಾಂ.ನಂತೆ ಅಥವಾ ಸ್ಪೈನೋಸಾಡ್ 45 ಎಸ್.ಸಿ. ಅನ್ನು 0.3 ಮಿ.ಲೀ. ಅಥವಾ ಥೈಯೋಡಿಕಾರ್ಬನ್ 2 ಗ್ರಾಂ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡುವುದು ಹಾಗೂ ಪ್ರತಿ ಸಿಂಪರಣೆಯನ್ನು ಮುಂಜಾನೆ/ ಸಂಜೆ ಕೈಗೊಳ್ಳಬೇಕು.
10 ಕೆ.ಜಿ. ಗೋಧಿ ತೌಡು ಅಥವಾ ಅಕ್ಕಿತೌಡಿಗೆ 1 ಕೆ.ಜಿ. ಬೆಲ್ಲ ಹಾಗೂ ಸ್ವಲ್ಪ ನೀರನ್ನು ಬೆರೆಸಿಟ್ಟು, ಮಾರನೇ ದಿನ 100 ಗ್ರಾಂ ಥೈಯೋಡಿಕಾರ್ಬ್ (ಪ್ರತಿ ಕೆ.ಜಿ. ಗೋಧಿ ತೌಡು ಅಥವಾ ಅಕ್ಕಿತೌಡಿಗೆ 10 ಗ್ರಾಂ. ನಂತೆ) ಕೀಟನಾಶಕ ಮಿಶ್ರಣ ಮಾಡಿ ಬೆಳೆಯ ಸುಳಿಯಲ್ಲಿ ಉದುರಿಸಬೇಕು.
ವಿಶೇಷ ಸೂಚನೆ:ಕೀಟನಾಶಕವನ್ನು ಸುಳಿಯಲ್ಲಿ ಬೀಳುವಂತೆ ಸಿಂಪರಣೆ ಮಾಡಬೇಕು. ಕೀಟನಾಶಕ ಸಿಂಪರಣೆ ಮಾಡುವಾಗ ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಬಳಸಿ, ಸಿಂಪರಣಾ ದ್ರಾವಣ ದೇಹದ ಮೇಲೆ ಬೀಳದಂತೆ ಹಾಗೂ ಉಸಿರಾಟದ ಮೂಲಕ ದೇಹ ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹೆಚ್ಚಿನ ಮಾಹಿತಿಗೆ ಮತ್ತು ಕೀಟನಾಶಕಗಳಿಗಾಗಿ ಹೋಬಳಿಮಟ್ಟದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.