ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್‍ನ್ನು ಆಯೋಜಿಸಲಿವೆ. ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‍ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು.
ಈ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು.
ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು(ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದೂ.ಸಂ: 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂ.ಸಂ: 08192-296885, ಹೊನ್ನಾಳಿ ದೂ.ಸಂ:08188-251732, ಚನ್ನಗಿರಿ ದೂ.ಸ 08189-229195 ಮತ್ತು ಜಗಳೂರು ದೂ.ಸ:08196-227600 ಸಂಪರ್ಕಿಸಲು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ ತಿಳಿಸಿದ್ದಾರೆ.



