ದಾವಣಗೆರೆ: ವಯಸ್ಸಿನ ಕಾರಣಕ್ಕಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಇದೀಗ ಮತ್ತೊಮ್ಮೆ ಪಕ್ಷ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ರೆ ಸ್ಪರ್ಧಿಗೆ ಸಿದ್ಧ ಎಂದಿದ್ದಾರೆ. ಇದರಿಂದ ದಾವಣಗೆರೆ ಉತ್ತರದಿಂದ ಆಕಾಂಕ್ಷಿಗಳಾಗಿದ್ದವರಿಗೆ ತಳಮಳ ಉಂಟಾಗಿದೆ. ದಾವಣಗೆರೆ ಉತ್ತರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಸ್ಪರ್ಧಿಸುವಂತೆ ಹಾಲಿ ಶಾಸಕ ಎಸ್. ಎ. ರವೀಂದ್ರನಾಥ್ ಅವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಒತ್ತಾಯಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ಬಹುತೇಕರು ಮಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಠಿಣ ಸ್ಪರ್ಧೆ ನೀಡಲು ರವೀಂದ್ರನಾಥ್ ಅವರಂತ ನಾಯಕರು ಬೇಕು. ಕಳೆದ ಚುನಾವಣೆಯಲ್ಲಿ ಸಚಿವರಾಗಿದ್ದ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಸೋಲುಣಿಸುವ ಮೂಲಕ ರವೀಂದ್ರನಾಥ್ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ.ಎಸ್. ಎಸ್. ಮಲ್ಲಿಕಾರ್ಜುನ್ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ರವೀಂದ್ರನಾಥ್ ಅವರು ತೀವ್ರ ಸ್ಪರ್ಧೆಯೊಡ್ಡಲಿದ್ದಾರೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರವೀಂದ್ರನಾಥ್, ಪಕ್ಷ ಟಿಕೆಟ್ ನೀಡಿದ್ರೆ ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಬೇರೆಯವರಿಗೆ ಟಿಕೆಟ್ ಕೊಟ್ಟರೆ ಗೆಲುವಿಗೆ ಶ್ರಮಿಸುತ್ತೇನೆ. ನಾನು ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ನನ್ನದೇನೂ ಇಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.
ಲೋಕಸಭಾ ಸದಸ್ಯ ಜಿ. ಎಂ. ಸಿದ್ದೇಶ್ವರ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಒಲವಿದೆ. ಶಾಸಕರಾಗಿ, ಸಚಿವರಾಗಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಅವರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಸ್ವಾಗತಿಸುತ್ತೇನೆ. ಅವರ ಗೆಲುವಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಲೋಕಸಭೆಗೆ ಸ್ಥಾನಕ್ಕೆ ನಾನು ಸ್ಪರ್ಧಿಸಬಹುದು ಎಂದರು.