ದಾವಣಗೆರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶಿ ಪ್ರವಾಸ ಕೈಗೊಂಡ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ಚುರುಕು ಪಡೆದುಕೊಂಡಿದೆ. ಈ ಬಗ್ಗೆ ಇಂದು ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದರು.
ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆಯೂ ಸಹ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು. ಇನ್ನೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆ ನಡೆದು ಐದು ವರ್ಷಗಳಾಗಿವೆ. ಈ ವಿಷಯ ನ್ಯಾಯಾಲಯದಲ್ಲಿದೆ. ಕೋರ್ಟ್ ತೀರ್ಪಿನ ಬಳಿಕ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.
ಒಳಮೀಸಲಾತಿ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಸರ್ಕಾರಕ್ಕೆ ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ವರದಿ ಬಂದ ನಂತರ ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.