ದಾವಣಗೆರೆ: ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಕನಿಷ್ಠ 5 ಲಕ್ಷ ಜನರು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಎಂದು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಹೇಳಿದರು.
ಅಮೃತ ಮಹೋತ್ಸವ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರೋಧ ಮಾಡಿಲ್ಲ. ಎಲ್ಲರೂ ಸೇರಿ ಮಾಡೋಣ ಎಂದು ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾರೂ ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷ ಪೂಜೆಯೇ ಮಾತ್ರ. ಡಿ.ಶಿವಕುಮಾರೋತ್ಸವವನ್ನ ಈ ಕಾರ್ಯಕ್ರಮದ ಬಳಿಕ ನೋಡೋಣ ಎಂದರು.
ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ದಾವಣಗೆರೆ ಮಧ್ಯಕರ್ನಾಟಕದ ಹೆಬ್ಬಾಗಿಲು ಆಗಿದೆ. ಬರಲು ಹೋಗಲು ಎಲ್ಲರಿಗೂ ಅನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಇಲ್ಲಿ ಆಯೋಜಿಸಿದ್ದೇವೆ. ಸಿದ್ದರಾಮಯ್ಯ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಒಪ್ಪುತ್ತಿರಲಿಲ್ಲ. ನಾವೆಲ್ಲರೂ ಸೇರಿ ಒಪ್ಪಿಸಿದ್ದೇವೆ. ಇದು ಸಿದ್ದರಾಮಯ್ಯರ ಶಕ್ತಿ ಪ್ರದರ್ಶನ ಅಲ್ಲ. ಈಗಿನ ಸರಕಾರದ ಆಡಳಿತದ ವೈಖರಿಯನ್ನು ಜನರೇ ನೋಡುತ್ತಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯಗೆ ಮೂರ್ನಾಲ್ಕು ಕಡೆಗಳಲ್ಲಿ ಸ್ಪರ್ಧೆಗೆ ಆಹ್ವಾನ ನೀಡಲಾಗುತ್ತಿದೆ. ಹರಿಹರ ಶಾಸಕ ಎಸ್. ರಾಮಪ್ಪ , ಸಿದ್ದರಾಮಯ್ಯ ಸ್ಪರ್ಧಿಸಿದರೆ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ಹರಿಹರದಲ್ಲಿ ಸ್ಪರ್ಧಿಸಿದರೆ ಗೆಲುವಿಗೆ ಶಕ್ತಿಮೀರಿ ಶ್ರಮಿಸುತ್ತೇವೆ ಎಂದು ಹೇಳಿದರು.
ಮುಂಬರುವ ವಿಧಾನ ಸಭೆಯಲ್ಲಿ ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅಥವಾ ಬೇಡವೋ ಎಂಬುದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಚುನಾವಣೆಗೆ ಇನ್ನು ಎಂಟು ತಿಂಗಳಿವೆ. ಚುನಾವಣೆ ಸಮೀಪ ಬಂದಾಗ ಹೇಳುತ್ತೇನೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಬಗ್ಗೆಯಷ್ಟೇ ನಮ್ಮ ಯೋಚನೆ. ಇನ್ನೂ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ, ಇದಕ್ಕೆ ತಲೆಕಡಿಸಿಕೊಳ್ಳಲ್ಲ. ನಮ್ಮ ಪಕ್ಷದಿಂದ ಸೂಕ್ತ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ. ಪ್ರಭಾ ಮಲ್ಲಿಕಾರ್ಜುನ್ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ನಮ್ಮ ಮುಂದಿಲ್ಲ. ಇದು ಮಾಧ್ಯಮ ಸೃಷ್ಟಿ ಎಂದರು.



