ದಾವಣಗೆರೆ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿರಲಿ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
ಶುಕ್ರವಾರ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ, ದಾವಣಗೆರೆ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ವಿವಿಧ ಸ್ತರಗಳಲ್ಲಿ ಎಲೆಮರೆಕಾಯಿಯಂತೆ ಕಾರ್ಯನಿರ್ವಹಿಸುತ್ತಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಆ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರರ ಸಂಘವು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಶಿಕ್ಷಕರು ಹಾಗೂ ಪೋಷಕರ ಬೆಂಬಲ ಮತ್ತು ಮಾರ್ಗದರ್ಶನದಿಂದಾಗಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಗಿದೆ. ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸಿಸುವುದರಿಂದ ಅಬ್ರಾಹಂ ಲಿಂಕನ್, ವಿಶ್ವೇಶ್ವರಯ್ಯನವರಂತಹ ಮಹನೀಯರನ್ನು ಸೃಷ್ಟಿಸಲು ಸಾಧ್ಯ. ವಿದ್ಯಾರ್ಥಿಗಳು ಸನ್ಮಾನವನ್ನು ಸ್ಪೂರ್ತಿಯಾಗಿ ಪಡೆದು ಜೀವನದಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಶಿವರಾಜು ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರತಿಭಾ ಪುರಸ್ಕಾರವನ್ನು ನೀಡುತ್ತಾ ಬರುತ್ತಿದೆ. ಕಳೆದ ಕೊರೋನಾ ಕಾಲಘಟ್ಟದಲ್ಲಿ ಜಿಲ್ಲೆಯು 23ನೇ ಶ್ರೇಯಾಂಕದಲ್ಲಿತ್ತು, ಪ್ರಸಕ್ತ ಸಾಲಿನಲ್ಲಿ 18ನೇ ಸ್ಥಾನದಲ್ಲಿದೆ ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಉತ್ತಮ ಶ್ರೇಣಿಯಲ್ಲಿ ತರಲು ಎಲ್ಲರೂ ಶ್ರಮಿಸೋಣ ಎಂದರು.
ವ್ಯಂಗ ಚಿತ್ರಕಾರರು ಹಾಗೂ ಪತ್ರಿಕಾ ಛಾಯಾಗ್ರಾಹಕರಾದ ಎಚ್.ಬಿ ಮಂಜುನಾಥ್ ಮಾತನಾಡಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಹೊಸ ಚಿಗುರು ಹಳೆ ಬೇರುಗಳಿಂದ ಕೂಡಿದ ಮಹಾ ಸಂಗಮವಾಗಿದೆ, ಹೊಸ ಚಿಗುರುಗಳು ಮುಂದಿನ ದಿನಗಳಲ್ಲಿ ಪ್ರಪಂಚಕ್ಕೆ ಸ್ಪೂರ್ತಿಯನ್ನು ತರುವ ಕೆಲಸ ಮಾಡಬೇಕಾಗಿದೆ. ಏಕೆಂದರೆ ಜಗತ್ತಿನಲ್ಲಿಯೇ ಅತಿ ಹೆಚ್ಚು ಯುವಕರನ್ನ ಒಳಗೊಂಡ ಭಾರತದ ಶಕ್ತಿಯೇ ಯುವಕರು. ಹಾಗಾಗೀ ವಿದ್ಯಾರ್ಥಿಗಳು ಪಠ್ಯೇತರವಾಗಿ ಹಲವು ವಿಷಯಗಳನ್ನು ತಿಳಿಯಬೇಕು, ಶ್ರವಣ, ಮನನ, ನಿಧಿವ್ಯಾಸನ ಈ ತ್ರಯಾಂಗದ ಯೋಗವನ್ನು ಪ್ರತಿ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಿ ಉನ್ನತ ಸ್ಥಾನಮಾನಗಳನ್ನು ಪಡೆದುಕೊಳ್ಳುವುದರ ಜೊತೆಗೆ ಕೌಟುಂಬಿಕವಾಗಿ ಮತ್ತು ಸಾಮಾಜಿಕವಾಗಿ ಉತ್ತಮ ನಾಗರಿಕರಾಗಿ ಜೀವನ ನಡೆಸಬೇಕು ಎಂದರು.
ಇದೆ ವೇಳೆ ಏಪ್ರಿಲ್/ಮೇ 2022ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ನಿವೃತ್ತ ಪ್ರಾಚಾರ್ಯರಾದ ಕೆ.ಎಸ್ ವೇದಮೂರ್ತಿ, ಕೃಷ್ಣಪ್ಪ.ಕೆ ಹಾಗೂ ಚಂದ್ರಯ್ಯ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳು ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಕರಿಸಿದ್ದಪ್ಪ ಎಸ್.ಜಿ, ಕಾರ್ಯದರ್ಶಿ ಟಿ.ಬಿ ಸುಜಾತ, ಖಜಾಂಚಿ ಟಿ.ಎ ಕುಸಗಟ್ಟಿ, ಜಿಲ್ಲಾ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಸಿ.ಬಿ ರವಿ ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಚಾರ್ಯರು, ವಿದ್ಯಾರ್ಥಿಗಳು ಹಾಗೂ ಫೋಷಕರು ಭಾಗವಹಿಸಿದ್ದರು.