ಡಿವಿಜಿ ಸುದ್ದಿ, ದಾವಣಗೆರೆ: ನಗರದ ಪ್ರತಿಷ್ಠಿತ ವೃತ್ತಗಳಲ್ಲೊಂದಾದ ರಾಮ್ ಅಂಡ್ ಕೋ ವೃತ್ತದಲ್ಲಿ ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ನಿವಾರಿಸಲು ಮಹಾನಗರ ಪಾಲಿಕೆ ಮರ ತೆರವುಗೊಳಿಸಲು ಮುಂದಾಗಿತ್ತು. ಇದಕ್ಕೆ ಸ್ಥಳೀಯರು ಮತ್ತು ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಮ್ ಅಂಡ್ ಕೋ ವೃತ್ತದಲ್ಲಿ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ದೂರು ಬಂದ ಹಿನ್ನೆಲೆ ಇತ್ತೀಚೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮೇಯರ್ ಅಜಯ್ ಕುಮಾರ್, ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದರು. ನಂತರ ಪಾಲಿಕೆ ವತಿಯಿಂದ 8 ಮರಗಳನ್ನು ತೆರವುಗೊಳಿಸಲು ಪಾಲಿಕೆ ವತಿಯಿಂದ ಅರಣ್ಯ ಇಲಾಖೆಗೆ ಆದೇಶ ಹೊರಡಿಸಲಾಗಿತ್ತು.

ಎರಡು ಅರಳಿ ಮರ ಸೇರಿದಂತೆ ಇತರೆ 6 ಮರ ತೆರವಿಗೆ ಸ್ಥಳೀಯರು ಮತ್ತು ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಥಳೀಯರ ಸಹಿ ಸಂಗ್ರಹಿಸಿದ್ದು, ಯಾವುದೇ ಕಾರಣಕ್ಕೂ ಮರ ತೆರವುಗೊಳಿಸಬಾರದು ಎಂದು ಅರಣ್ಯ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈ ಮರಗಳು ತುಂಬಾ ಹಳೆಯ ಮರಗಳಾಗಿದ್ದು, ಈ ಮರಗಳಿಗೆ ಐತಿಹಾಸಿಕ ಹಿನ್ನೆಲೆ ಹೊಂದಿವೆ. ಹೀಗಾಗಿ ಈ ಮರಗಳನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ. ಒಂದು ವೇಳೆ ತೆರವುಗೊಳಿಸಿದರೆ, ಕಾನೂನು ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.



