ದಾವಣಗೆರೆ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಎಸ್‍ಎಸ್‍ಎಲ್‍ಸಿ ತರಗತಿಗೆ ದಾಖಲಾದ ಎಲ್ಲ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೊಂದಾಯಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ ಅವರು ಡಿಡಿಪಿಐ ಪರಮೇಶ್ವರಪ್ಪ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಮಾತನಾಡಿ, ಕಳೆದ ವರ್ಷ ಕೋವಿಡ್ ಕಾರಣಕ್ಕಾಗಿ 9 ನೇ ತರಗತಿಯ ಸುಮಾರು 23 ಸಾವಿರ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಿ, 10ನೇ ತರಗತಿಗೆ ಅರ್ಹತೆ ಕಲ್ಪಿಸಲಾಗಿತ್ತು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 21,800 ವಿದ್ಯಾರ್ಥಿಗಳು ಮಾತ್ರ ನೊಂದಣಿ ಮಾಡಿಕೊಂಡಿದ್ದು, ಉಳಿದ ವಿದ್ಯಾರ್ಥಿಗಳು ನಾನಾ ಕಾರಣಗಳಿಂದ ನೊಂದಣಿ ಆಗಿಲ್ಲ.
ಕೆಲ ವಿದ್ಯಾರ್ಥಿಗಳು ವಲಸೆ, ಕೆಲಸಕ್ಕೆ ಹೋಗಿರುವುದು ಮುಂತಾದ ಕಾರಣಗಳಿಂದ ನೊಂದಣಿ ಮಾಡಿಕೊಂಡಿಲ್ಲ. ಕಳೆದ ವರ್ಷ ದಾಖಲಾದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪೈಕಿ ಶೇ. 95 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಈ ವರ್ಷ ಇದರ ಪ್ರಮಾಣ ಶೇ. 85 ರಷ್ಟಾಗಿದೆ ಎಂದು ವಿವರಣೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಪ್ರಸಕ್ತ ವರ್ಷ ಕೋವಿಡ್ ಕಾರಣದಿಂದಾಗಿ ವಿದ್ಯಾರ್ಥಿಗಳ ಶಾಲೆ ಹಾಜರಾತಿ ಕಡ್ಡಾಯವಿಲ್ಲ. ಹೀಗಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನೊಂದಣಿ ಮಾಡಿರದ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ, ಎಲ್ಲ ವಿದ್ಯಾರ್ಥಿಗಳನ್ನೂ ಪರೀಕ್ಷೆಗೆ ತಪ್ಪದೆ ನೊಂದಾಯಿಸುವಂತೆ ಮಾಡಿ, ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ, ಅವರು ಪರೀಕ್ಷೆಯಲ್ಲಿ ಪಾಸ್ ಆಗಲು ಅಗತ್ಯವಿರುವ ಶಿಕ್ಷಣ, ತರಬೇತಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದರು.
ಡಿಡಿಪಿಐ ಮಾತನಾಡಿ , ಪರೀಕ್ಷೆಗೆ ನೊಂದಾಯಿಸಲು ಇನ್ನೂ ಮೂರು ದಿನಗಳ ಕಾಲಾವಕಾಶ ಮಾತ್ರ ಇದೆ. ಆದಷ್ಟು ಶ್ರಮ ವಹಿಸಿ ಕ್ರಮ ವಹಿಸಲಾಗುವುದು. ಪ್ರಸಕ್ತ ವರ್ಷ ಎಸ್‍ಎಸ್‍ಎಲ್‍ಸಿ ಪಠ್ಯಕ್ರಮ ಶೇ. 30 ರಷ್ಟು ಕಡಿತಗೊಳಿಸಿದ್ದು, ಕಲಿಕಾ ಸಾಮಥ್ರ್ಯ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವುದು, ಮಾದರಿ ಪ್ರಶ್ನೆಪತ್ರಿಕೆಗಳು, ಪಾಸಿಂಗ್ ಪ್ಯಾಕೇಜ್ ಬೋಧನೆ ಕಾರ್ಯಕ್ರಮ ಹಾಕಿಕೊಂಡು ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮಪಡಿಸಲು ಯತ್ನಿಸಲಾಗುವುದು ಎಂದರು. ಜಿಪಂ ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಪ್ರತಿಕ್ರಿಯಿಸಿ, ರಾಜ್ಯ ಮಟ್ಟದಲ್ಲಿ ಜಿಲ್ಲೆ 10 ರೊಳಗೆ ಸ್ಥಾನ ಪಡೆಯಬೇಕು, ಈ ನಿಟ್ಟಿನಲ್ಲಿ ಪ್ರಯತ್ನ ಕೈಗೊಳ್ಳಿ ಎಂದರು.
5ನೇ ತರಗತಿವರೆಗಿನ ಶಾಲೆಗೆ ಅನುಮತಿ ಇಲ್ಲ : ಕೋವಿಡ್ ಕಾರಣಕ್ಕಾಗಿ ರಾಜ್ಯದಲ್ಲಿ 1 ರಿಂದ 5ನೇ ತರಗತಿವರೆಗಿನ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಿಲ್ಲ, ಆದರೆ ಜಿಲ್ಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿ ಶಾಲೆಗಳನ್ನು ನಡೆಸುತ್ತಿರುವುದಾಗಿ ತಿಳಿದುಬಂದಿದೆ. ಶಾಲೆ ವಿದ್ಯಾರ್ಥಿಗಳಿಗೆ ಆಗಾಗ್ಗೆ ಕೋವಿಡ್ ಪರೀಕ್ಷೆ ನಡೆಸಬೇಕು, ಪರೀಕ್ಷಾ ಸಮಯದಲ್ಲಿ ಮಕ್ಕಳ ಆರೋಗ್ಯದಲ್ಲಿ ತೊಂದರೆ ಅನುಭವಿಸುವಂತಾಗಬಾರದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಜಿ.ಪಂ. ಅಧ್ಯಕ್ಷರು ಪ್ರಶ್ನಿಸಿದರು.
ಪ್ರತಿಕ್ರಿಯಿಸಿದ ಡಿಡಿಪಿಐ ಅವರು, ನಿರ್ದಿಷ್ಟ ಶಾಲೆ ಬಗ್ಗೆ ದೂರು ಬಂದಲ್ಲಿ, ಪರಿಶೀಲಿಸಿ, ಅಂತಹವರ ವಿರುದ್ಧ ಕ್ರಮ ವಹಿಸಲಾಗುವುದು, ಅಲ್ಲದೆ, ಅಂತಹ ಶಾಲೆಗಳ ಮಾನ್ಯತೆ ರದ್ದುಪಡಿಸಲಾಗುವುದು. ಆರೋಗ್ಯ ಇಲಾಖೆ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ನಿಯಮಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯಕ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವೀರ ಶೇಖರಪ್ಪ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಫಕೀರಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ವರ , ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.