ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಿಸುವ ಬಗ್ಗೆ ಇವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಬಳಿಕ ಮಾತನಾಡಿದ ಅವರು, ಎರಡು ದಿನ ಸರಣಿ ಸಭೆ ನಡೆಸುತ್ತೇವೆ. ಶಾಲೆಗಳನ್ನು ಆರಂಭಿಸುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿನ ಸ್ಥಿತಿಗತಿ ಅಧ್ಯಯನ ಮಾಡುತ್ತೇವೆ ಎಂದರು.
ಸಭೆಯ ಬಳಿಕ ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಮುಖ್ಯಮಂತ್ರಿಗೆ ವರದಿ ಸಲ್ಲಿಸುತ್ತೇವೆ. ಆ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರುತ್ತೇವೆ. ಶಾಲೆಗಳನ್ನು ಆರಂಭಿಸುವ ಕುರಿತು ಶಿಕ್ಷಕರ ಸಂಘಗಳ ಅಧ್ಯಕ್ಷರ ಜೊತೆಗೂ ಚರ್ಚೆ ಮಾಡಿದ್ದೇವೆ. ಮೈಸೂರು ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರಿನ ಖಾಸಗಿ ಶಾಲೆಗಳ ಪ್ರತಿನಿಧಿಗಳು ಕೂಡಾ ಶಾಲೆಗಳನ್ನು ಆರಂಭಿಸುವ ಕುರಿತುಗ ಸಭೆ ನಡೆಸುತ್ತಿದ್ದಾರೆ ಎಂದರು. ಹಂತ ಹಂತವಾಗಿ ಶಾಲೆ ಆರಂಭಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಮೊದಲ ಹಂತದಲ್ಲಿ 8ರಿಂದ 12ರವರೆಗಿನ ಶಾಲೆಗಳನ್ನು ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ತಿಳಿಸಿದ್ದಾರೆ.