ನವದೆಹಲಿ:ಆಯುಷ್ ವೈದ್ಯರಿಗೆ ಶಸ್ತ್ರಚಿಕಿತ್ಸೆ ತರಬೇತಿ ನೀಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವುದನ್ನು ವಿರೋಧಿಸಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನಾಳೆ (ಡಿ. 11) ಬೆಳಗ್ಗೆ 6ಗಂಟೆಯಿಂದ ಸಂಜೆ 6ರವರೆಗೆ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ (ಒಪಿಡಿ) ಬಂದ್ ನಡೆಸುವ ಮೂಲಕ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.
ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ತರಬೇತಿ ನೀಡಲು ಸರ್ಕಾರ ಹೊರಡಿಸಿರುವ ಅಧಿಸೂಚನೆ ವಾಪಸ್ ಪಡೆಯುವಂತೆ ಆಗ್ರಹಿಸಿ ನಾಳೆ ಒಪಿಡಿ ಬಂದ್ ಗೆ ಕರೆ ನೀಡಲಾಗಿದೆ. ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಕಲಿಯಲು ಅವಕಾಶ ನೀಡುವುದನ್ನುಮಿಕ್ಸೋಪತಿ ಎಂದು ಕರೆದಿರುವ ಐಎಂಎ ಆಕ್ರೋಶ ವ್ಯಕ್ತಪಡಿಸಿದೆ.
ನವೆಂಬರ್ 20ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಸ್ನಾತಕೋತ್ತರ ಆಯುರ್ವೇದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ 58 ಬಗೆಯ ಶಸ್ತ್ರಚಿಕಿತ್ಸೆ ನಡೆಸುವ ತರಬೇತಿಯನ್ನು ನೀಡಬೇಕು ಹಾಗೂ ಸ್ವತಂತ್ರವಾಗಿ ಶಸ್ತ್ರಚಿಕಿತ್ಸೆ ಮಾಡುವಂತಿರಬೇಕು ಎಂದು ತಿಳಿಸಿದೆ.



