ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಬಾಕಿ ದಂಡ ಕಟ್ಟಲು ಮತ್ತೊಮ್ಮೆ ಶೇ.50 ರಷ್ಟು ರಿಯಾಯಿತಿ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ಸರ್ಕಾರ, ಇದೀಗ ಮತ್ತೆ ರಿಯಾಯಿತಿ ನೀಡಿದೆ.
2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು.ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಮಾತ್ರ ಅನ್ವಯವಾಗುತ್ತದೆ.
ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯ ನಡವಳಿಗಳಲ್ಲಿ ಪೂಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿತ್ತು. ಅದರಂತೆ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.