ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಷಡಕ್ಷರಿ ಅವರ ನೇತೃತ್ವದ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ 7ನೇ ವೇತನ ಆಯೋಗ ಜಾರಿ ಬಗ್ಗೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆಯೋಗ ವರದಿ ಸಲ್ಲಿಸಲು ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣೆ ನೀತಿ ಸಂಹಿತೆ ಘೋಷಣೆಯಾಗುವ ಮೋದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು.
ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11,366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಬೇಕು. ತೀವ್ರತರವಾದ 7 ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಮನವಿ ಮಾಡಿದರು.
ಮಂಗಳವಾರ ಮಧ್ಯಾಹ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ 7ನೇ ರಾಜ್ಯ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸಂಘವು ರೂಪಿಸಿರುವ ಕಾರ್ಯಕ್ರಮದ ಪ್ರಗತಿ ಬಗ್ಗೆ ಚರ್ಚಿಸಲು ಸಿ. ಎಸ್. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರುಗಳ ಸಭೆ ನಡೆಯಿತು.



