ಚಿತ್ರದುರ್ಗ: ಕೊರೊನಾ ಆತಂಕ ನಡುವೆ ಕಾಲೇಜು ಆರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದ ತರಗತಿ ನಡೆಯುತ್ತಿಲ್ಲ. ಸರ್ಕಾರ ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಸಿದರು. ಬಸ್ ಪಾಸ್ ಸಮಸ್ಯೆ, ಹಾಸ್ಟೆಲ್ ಸೌಲಭ್ಯ ಹಾಗೂ ವಿದ್ಯಾರ್ಥಿ ವೇತನ ಕಲ್ಪಿಸುವಂತೆ ಒತ್ತಾಯಿಸಿದರು.
ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಕೋವಿಡ್ ಭಯ ಲೆಕ್ಕಿಸದೇ ಕಾಲೇಜುಗಳತ್ತ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಆದರೆ, ಬೆರಳೆಣಿಕೆಯಷ್ಟು ಪ್ರಾಧ್ಯಾಪಕರಿದ್ದು, ಕೆಲವೆಡೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ.ಬಸ್ ಸೌಲಭ್ಯ ಇಲ್ಲದೆಯೇ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಕಾಲೇಜು ಆರಂಭವಾದರೂ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಇಲ್ಲ. ಈ ಕುರಿತು ಗಮನಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಕಾಲೇಜುಗಳಲ್ಲಿ ಶೌಚಾಲಯ, ಸೂಕ್ತ ಆಸನ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಉಚಿತ ಬಸ್ ಪಾಸ್ ನೀಡಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರ ನೇಮಕಕ್ಕೆ ರಾಜ್ಯದ ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.



