ಬೆಂಗಳೂರು: ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆ ಭರ್ತಿ ಮಾಡಲು ಸರ್ಕಾರಕ್ಕೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಪರಿಷತ್‌ನಲ್ಲಿಂದು ಹೇಳಿದರು.
ರಾಜ್ಯದಲ್ಲಿ ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಹೀಗಾಗಿ ಯಾವುದೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕೃಷಿ ವಿವಿ ಹುದ್ದೆಗಳ ಮಹತ್ವ ಹಿನ್ನೆಲೆಯಲ್ಲಿ ಭರ್ತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಶೇಷ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯಲಾಗುವುದು ಎಂದು ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಎಸ್.ವಿ.ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು, ಧಾರವಾಡ, ರಾಯಚೂರು ಕೃಷಿ ವಿವಿ, ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿವಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.
ಬೆಂಗಳೂರು ಕೃಷಿ ವಿವಿಯಲ್ಲಿ 234 ಬೋಧಕ, 997 ಬೋಧಕೇತರ ಹುದ್ದೆಗಳು, ಧಾರವಾಡದ ಕೃಷಿ ವಿವಿಯಲ್ಲಿ 228 ಬೋಧಕ, 655 ಬೋಧಕೇತರ ಹುದ್ದೆಗಳು, ರಾಯಚೂರಿನ ವಿವಿಯಲ್ಲಿ 228 ಬೋಧಕ, 533 ಬೋಧಕೇತರ ಹುದ್ದೆ ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿವಿಯಲ್ಲಿ 184 ಬೋಧಕ, 404 ಬೋಧಕೇತರ ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ ಅಗತ್ಯವಿರುವ ಹುದ್ದೆ ಭರ್ತಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.



