ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ಎನ್ನುವುದನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಂದು ತಿದ್ದುಪಡಿ ಮಾಡುವುದು, ವಿಧಾನಸೌಧದ ಆವರಣದಲ್ಲಿ ಬಸವೇಶ್ವರರ ಪುತ್ಥಳಿ ಸ್ಥಾಪಿಸಬೇಕು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರ್ಪಡೆ ಮಾಡಬೇಕು ಎನ್ನುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಇಂದು ನಡೆದ ಮಹಾಸಭಾದ ಪ್ರಾತಿನಿಧಿಕ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ವೀರಶೈವ ಲಿಂಗಾಯತದ ಬಗ್ಗೆ ಯಾವುದೇ ಗೊಂದಲ ಇಲ್ಲ. ನಾವು ಸಮುದಾಯವನ್ನು ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದೇವೆ. ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಸಭಾ ಪ್ರಧಾನಕಾ ರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದರು. ಸಾಮಾಜಿಕ ನ್ಯಾಯದ ಪರಿಕಲ್ಪನೆ ಜಗತ್ತಿಗೆ ನೀಡಿದವರು ಬಸವಾದಿ ಶರಣರು. ಲಿಂಗಾಯಿತ ವೀರಶೈವರೇ ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದಾರೆ. ಸರ್ಕಾರ ಸಂವಿಧಾನಬದ್ಧವಾಗಿ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಸರ್ಕಾರ ಸಮುದಾಯದ ಬೇಡಿಕೆಗೆ ಸ್ಪಂದಿಸದಿದ್ದರೆ, ಹೋರಾಟ ನಡೆಸಲಾಗುವುದು. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ನೆಲೆಯುರಿದ್ದು, ರಾಜ್ಯ್ದಲ್ಲಿ ಶೇ 18ರಿಂದ 20ರಷ್ಟು ವೀರಶೈವರಿದ್ದಾರೆ. ನಮ್ಮ ಸಮಾಜದವರು ಮುಂದುವರಿದವರು ಎಂದು ಕೆಲವರು ಹೇಳುತ್ತಾರೆ. ಆದರೆ, ಲಿಂಗಾಯತ ಸಮುದಾಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದೆ ಎಂದರು.
ಒಬಿಸಿ ಪಟ್ಟಿಗೆ ಸೇರಿಸುವುದರಿಂದ ಕೇಂದ್ರ ಸರ್ಕಾರದ ಬ್ಯಾಂಕಿಂಗ್, ರೈಲ್ವೆ ನೇಮಕಾತಿ ಮಂಡಳಿ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಕೇಂದ್ರ ಸರ್ಕಾರದ ಉದ್ದಿಮೆಗಳ ನೇಮಕಾತಿಯಲ್ಲಿ ಅನುಕೂಲವಾಗಲಿದೆ ಎಂದರು.



