ಬೆಳಗಾವಿ: ರಾಜ್ಯದ ವಾಲ್ಮೀಕಿ ನಿಗಮ ಹಗರಣದಲ್ಲಿ ಸರ್ಕಾರಿ ನೌಕರ ಚಂದ್ರಶೇಖರ್ ಆತ್ಮಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಎಸ್ ಡಿಎ ನೌಕರನೊಬ್ಬ ಪ್ರಭಾವಿ ಸಚಿವರ ಆಪ್ತ ಸಹಾಯಕನ ಹೆಸರು ಬರೆದಿಟ್ಟು ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
- ತಹಶೀಲ್ದಾರ್ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಎಸ್ ಡಿಎ ನೌಕರ
- ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಮಾಡಿಕೊಂಡ ನೌಕರ
- ಕುಟುಂಬಸ್ಥರ ಆಕ್ರಂದನ
- ನಿನ್ನೆಯಷ್ಟೇ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ
- ಸಾವಿಗೆ ತಹಶೀಲ್ದಾರ್ , ಸಚಿವೆ ಪಿಎ ಕಾರಣ ಎಂದು ಮೆಸೇಜ್
ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ್ (35) ನೇಣಿಗೆ ಶರಣಾದ ನೌಕರ. ರುದ್ರಣ್ಣ ಯಡವಣ್ಣವರ್ ಅವರನ್ನು ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿನ್ನೆ (ನ.04) ಆದೇಶ ಹೊರಡಿಸಿದ್ದರು. ಆತ್ಮಹತ್ಯೆಗೂ ಮುನ್ನ ತಹಶೀಲ್ದಾರ್ ವಾಟ್ಸಪ್ ಗ್ರೂಪ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತರೇ ತನ್ನ ಸಾವಿಗೆ ಕಾರಣ ಎಂದು ಮೆಸೇಜ್ ಮಾಡಿದ್ದಾರೆ.
ರುದ್ರಣ್ಣ ಆತ್ಮಹತ್ಯೆ ವಿಷಯ ಗೊತ್ತಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿದು ರುದ್ರಣ್ಣ ಪತ್ನಿ ಗಿರಿಜಾ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಕಾರಣ ಅಂತ ಸೋಮವಾರ ಸಂಜೆ ತಹಶೀಲ್ದಾರ್ ಕಚೇರಿ ವಾಟ್ಸಾಪ್ ಗ್ರೂಪ್‌ನಲ್ಲಿ ರುದ್ರಣ್ಣ ಯಡವಣ್ಣವರ್ ಸಂದೇಶ ಕಳುಹಿಸಿದ್ದರು.ನಮ್ಮ ಕಚೇರಿಯಲ್ಲಿ ತುಂಬಾ ಅನ್ಯಾಯ ನಡೆಯುತ್ತಿದೆ. ದಯವಿಟ್ಟು ಎಲ್ಲರೂ ಒಟ್ಟಾಗಿ ಹೋರಾಡಿ ಎಂದು ಮೆಸೇಜ್ ಹಾಕಿದ್ದರು. ಇನ್ನು ನೌಕರ ಬರೆದಿಟ್ಟಿದ್ದ ಡೆತ್ ನೋಟ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್, ಖಡೇಬಜಾರ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಡೆತ್ ನೋಟ್‌ನಲ್ಲಿ ಬರೆದಿಟ್ಟ ಸೋಮು ದೊಡದವಾದ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಆಗಿದ್ದಾರೆ.