ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಕೊನೆ ಕ್ಷಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ. ಎನ್ ಡಿಎ (NDA) ಮೈತ್ರಿಗೆ ಕೈಕೊಟ್ಟು ಕಾಂಗ್ರೆಸ್ ‘ಕೈ’ ಹಿಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಎರಡು ದಿನದ ಹಿಂದೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಈಗ ಬಿಜೆಪಿ ಸದಸ್ಯತ್ವ ಸ್ಥಾನಕ್ಕೂ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.
ಈ ಮೂಲಕ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮ ಬಹುತೇಕ ತೆರೆಬಿದ್ದಂತಾಗಿದೆ. ಸಿ.ಪಿ.ಯೋಗೇಶ್ವರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಚರ್ಚೆ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಯೋಗೇಶ್ವರ್ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದರು. ಕೆಲ ಹೊತ್ತಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ತಿಳಿದುಬಂದಿದೆ. ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಬಿಜೆಪಿ-ಜೆಡಿಎಸ್ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ.



