ಬೆಂಗಳೂರು : ಕೋವಿಡ್ 2 ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37.72 ಕೋಟಿ ರೂಪಾಯಿ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಟಾಸ್ಕ್ ಫೋರ್ಸ್ ನ ಹೊಸ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನಿಯೋಜಿಸಿದ್ದು, ಮುಂದಿನ ಮೂರು ತಿಂಗಳಲ್ಲಿ ಕೋವಿಡ್ ನಿಯಂತ್ರಿಸುವ ಬಗ್ಗೆ ಚರ್ಚೆಯಾಗಿದೆ. 90 ದಿನಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲು 11.32 ಕೋಟಿ ರೂ. ವೆಚ್ಚದಲ್ಲಿ 10 ಲಕ್ಷ ಹೊಸ ರಾಪಿಡ್ ಆಂಟಿಜೆನ್ ಕಿಟ್ ಖರೀದಿ, 22.50 ಕೋಟಿ ರೂ. ವೆಚ್ಚದಲ್ಲಿ ಔಷಧಿ ಖರೀದಿಗೆ ಮಂಜೂರು ನೀಡಲಾಗಿದೆ ಎಂದರು.
ರೆಮಿಡಿಸ್ವಿರ್ ಔಷಧಿ 1,800 ರೂ.ಗೆ ಸರ್ಕಾರಕ್ಕೆ ದೊರೆಯುತ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳು ಈ ಔಷಧಿಗೆ ಹೆಚ್ಚು ದರ ವಿಧಿಸುತ್ತಿರುವ ಬಗ್ಗೆ ದೂರು ಬಂದಿದೆ. 2 ಸಾವಿರ ರೂ.ಗಿಂತ ಹೆಚ್ಚಿನ ದರ ವಿಧಿಸಿದರೆ ಕೆಪಿಎಂಇ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು. ಈ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಸೇರಿದಂತೆ 10 ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆದಿದೆ.



