ಬೆಂಗಳೂರು: ಬುರೇವಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿ.4ರಿಂದ ಡಿ.6ರವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಇನ್ನು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಸದ್ಯ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಜತೆಗೆ ಚಳಿಯೂ ಹೆಚ್ಚಳವಾಗಲಿದೆ. ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಡಿ.3ರ ರಾತ್ರಿ ಹಾಗೂ ಡಿ.4ರ ಬೆಳಗ್ಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಪ್ರತಿ ಗಂಟೆಗೆ 90 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದ್ದಾರೆ.



