ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕ್ಷೇತ್ರ ಮರುವಿಂಗಡಣೆ ಹಾಗೂ ಎಲ್ಲ ವರ್ಗಗಳಿಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್ 12 ವಾರ ಗಡುವು ನೀಡಿದೆ. ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡ ಒಂದು ವಾರದೊಳಗೆ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.
ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಹಾಗೂ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರ ವಾದ-ಪ್ರತಿವಾದ ಆಲಿಸಿದ ಪೀಠ, 12 ವಾರಗಳ ಒಳಗೆ ಸರ್ಕಾರ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಬೇಕು. ಇದಾದ ಒಂದು ವಾರದೊಳಗ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು. ಸರ್ಕಾರ ಮತ್ತೆ ಯಾವುದೇ ಕಾರಣ ನೀಡಿ ಮತ್ತೆ ಸಮಯ ಕೋರುವಂತಿಲ್ಲ ಎಂದು ಪೀಠ ಹೇಳಿದೆ. ಇಂದಿನಿಂದ 12 ವಾರಗಳಲ್ಲಿ ಎಲ್ಲ ಪ್ರಕ್ರಿಯೆ ಮುಗಿಯಬೇಕು. ಸರ್ಕಾರಕ್ಕೆ ಮತ್ತೆ ಕಾಲಾವಕಾಶ ವಿಸ್ತರಿಸಬಾರದು ಆಯೋಗದ ಪರ ವೊಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠ, ಸರ್ಕಾರಕ್ಕೆ 12 ವಾರಗಳ ಗಡುವು ನೀಡಿ, ವಿಚಾರಣೆಯನ್ನು ಮೂರು ತಿಂಗಳ ನಂತರಕ್ಕೆ ಮುಂದೂಡಿತು.



