ದಾವಣಗೆರೆ: ಡಿಸ್ಟಿಲರಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಕೆಗೆ ಡಿಸಿ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ದುಗ್ಗಾವತಿ ಡಿಸ್ಟಿಲರಿ ಕಾರ್ಖಾನೆಯಿಂದ ಹೊರಸೂಸುವ ಹಾರುಬೂದಿ ಹಾಗೂ ತ್ಯಾಜ್ಯದಿಂದ ಗಾಳಿ, ನೀರು ಕಲುಷಿತವಾಗಿರುವ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಬೆಂಗಳೂರಿನ ವಲಯ ಪರಿಸರ ಇಲಾಖಾ ಕಚೇರಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಕಾರ್ಖಾನೆಯವರು ಮಾಲಿನ್ಯ ನಿಯಂತ್ರಣಕ್ಕಾಗಿ ನೂತನ ತಂತ್ರಜ್ಞಾನ ಅಳವಡಿಕೆಗೆ ಸೂಚಿಸಲಾಗುವುದು, ಇದನ್ನು ಕಾರ್ಖಾನೆಯವರೂ ಕೂಡ ಅಳವಡಿಸಿ, ಸೂಚನೆಯನ್ನು ಪಾಲಿಸುವ ವಿಶ್ವಾಸವಿದೆ. ಈಗಾಗಲೇ ವಿವಿಧ ಇಲಾಖೆಗಳು ನೂತನ ತಂತ್ರಜ್ಞಾನಗಳನ್ನು ಅಳವಡಿಸಿ, ಪರಿಸರ ಮಾಲಿನ್ಯವನ್ನು ನಿಯಂತ್ರಿಸಿರುವ ನಿದರ್ಶನಗಳಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಹರಿಹರ ತಾಲ್ಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಭಾನುವಾರ ಏರ್ಪಡಿಸಲಾದ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಚಾಲನೆ ಮಾತನಾಡಿದರು.

ಚಿಕ್ಕಬಿದರಿ ಸಮೀಪದ ಡಿಸ್ಟಿಲರಿ ಕಾರ್ಖಾನೆಯಿಂದ ಹೊರಸೂಸುವ ಹಾರುಬೂದಿಯಿಂದಾಗಿ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ, ಆರೋಗ್ಯ ಸಮಸ್ಯೆಗಳು ತಲೆದೋರುತ್ತಿವೆ ಎಂಬುದಾಗಿ ಇಲ್ಲಿನ ಗ್ರಾಮಸ್ಥರು ದೂರು ನೀಡಿದ್ದರು. ಹೀಗಾಗಿ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಗ್ರಾಮಸ್ಥರ ಕೋರಿಕೆಯಂತೆ ಆರೋಗ್ಯ ಇಲಾಖೆವತಿಯಿಂದ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿ, ಗ್ರಾಮದ ಪ್ರತಿಯೊಬ್ಬರೂ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಡಂಗುರ ಹಾಕಿಸಲಾಗಿತ್ತು.

FB IMG 1612704379932

ಇಲ್ಲಿನ ಗ್ರಾಮಗಳ ನೀರಿನ ಮಾದರಿಯನ್ನು ಸಂಗ್ರಹಿಸಿ, ಬಳಕೆಗೆ ಯೋಗ್ಯವಿರುವ ಬಗ್ಗೆ ಪರೀಕ್ಷಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಅಲ್ಲದೆ ಗ್ರಾಮಸ್ಥರ ರಕ್ತದ ಮಾದರಿ ಸಂಗ್ರಹಿಸಿ ವಿಶೇಷ ಪರೀಕ್ಷೆಗೆ ಒಳಪಡಿಸುವಂತೆಯೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದೀಗ ಗ್ರಾಮದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಮಕ್ಕಳು, ವೃದ್ಧರು, ಮಹಿಳೆಯರು, ಗರ್ಭಿಣಿಯರು ಸೇರಿದಂತೆ ಎಲ್ಲರೂ ಆರೋಗ್ಯ ತಪಾಸಣೆ ನಡೆಸುವಂತೆ ಅನುಕೂಲ ಮಾಡಿಕೊಡಲಾಗಿದೆ. ಒಂದು ವೇಳೆ ಆರೋಗ್ಯ ಸಮಸ್ಯೆ ಗಂಭೀರವಾಗಿದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡುವಂತೆಯೂ ಸೂಚಿಸಲಾಗಿದೆ. ಆರೋಗ್ಯ ಇಲಾಖೆ ನೀಡುವ ವರದಿಯನ್ನಾಧರಿಸಿ ಮುಂದಿನ ಅಗತ್ಯ ಕ್ರಮ ಜರುಗಿಸಲಾಗುವುದು. ಗ್ರಾಮಸ್ಥರ ಆರೋಗ್ಯ ಕಾಪಾಡಲು ಜಿಲ್ಲಾಡಳಿತ ಬದ್ಧವಾಗಿದ್ದು, ಈ ಕುರಿತು ಜನರಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ಮಾಡಲಾಗುವುದು ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಮಾತನಾಡಿ, ಜಿಲ್ಲೆಯ ಕೆಲವು ಗ್ರಾಮಗಳಲ್ಲಿನ ನೀರಿನಲ್ಲಿ ಫ್ಲೋರೈಡ್ ಅಂಶ ಇರುವ ಬಗ್ಗೆ ಮಾಹಿತಿ ಬಂದಿದ್ದು, ಇದಕ್ಕೆ ಕಾರಣಗಳನ್ನು ಕಂಡುಹಿಡಿದು, ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ. ಜಲಸಿರಿ ಯೋಜನೆಯಡಿ ಕೊಂಡಜ್ಜಿ ಹಾಗೂ ಸುತ್ತಮುತ್ತಲ 11 ಗ್ರಾಮಗಳಿಗೆ ಶುದ್ಧ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ. ಸ್ವಚ್ಛ ಭಾರತ್ ಮಿಷನ್ ನಡಿ ಮನೆ ಮನೆಯಿಂದ ಕಸ ಸಂಗ್ರಹಿಸಿ, ಪ್ಲಾಸ್ಟಿಕ್ ತೊಡೆದುಹಾಕಿ ಪರಿಸರ ಕಾಯ್ದುಕೊಳ್ಳುವುದು, ಅಲ್ಲದೆ ಕಟ್ಟಲಾಗಿರುವ ಶೌಚಾಲಯಗಳನ್ನು ಬಳಸುವಂತೆ ಜಾಗೃತಿ ಮೂಡಿಸಲಾಗುವುದು. ಇಲ್ಲಿನ ಗ್ರಾಮಗಳಲ್ಲಿ ಗಾಳಿ, ನೀರಿನಿಂದ ಹರಡುವ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾತನಾಡಿ, ಕಾರ್ಖಾನೆ ತ್ಯಾಜ್ಯ ನೀರಿನಲ್ಲಿ ಸೇರಿ, ನೀರು ಕಲುಷಿತಗೊಂಡು ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಹಾರುಬೂದಿ ಗಾಳಿಯೊಂದಿಗೆ ಬೆರೆತು ಗಾಳಿಯೂ ಕಲುಷಿತವಾಗಿರುವ ಸಾಧ್ಯತೆಗಳಿವೆ. ಇಲ್ಲಿನ ನೀರಿನ ಮಾದರಿಯನ್ನು ಸಂಗ್ರಹಿಸಿ, ಬಳಕೆಗೆ ಅರ್ಹವಾಗಿದೆಯೋ, ಇಲ್ಲವೋ ಎಂಬುದನ್ನು ಪರೀಕ್ಷಿಸಿ ವರದಿ ಸಲ್ಲಿಸಲಾಗುವುದು. ಒಂದು ವೇಳೆ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿರುವುದು ಕಂಡುಬಂದಲ್ಲಿ, ಉನ್ನತ ತಪಾಸಣೆಗೆ ಬೆಂಗಳೂರಿಗೆ ಪರೀಕ್ಷೆಗೆ ಮತ್ತೊಮ್ಮೆ ಕಳುಹಿಸಿಕೊಡಲಾಗುವುದು. ಸದ್ಯ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಹಮ್ಮಿಕೊಂಡಿದ್ದು, ಯಾರಿಗಾದರೂ ಗಂಭೀರ ಆರೋಗ್ಯ ಸಮಸ್ಯೆ ಅಥವಾ, ಒಂದೇ ತರಹದ ಆರೋಗ್ಯ ಸಮಸ್ಯೆಗಳು ಹೆಚ್ಚು ಕಂಡುಬಂದಲ್ಲಿ, ಉನ್ನತ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗುವುದು. ಇಲ್ಲಿನ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನಟರಾಜ್, ಆರೋಗ್ಯಾಧಿಕಾರಿ ಡಾ. ಚಂದ್ರಮೋಹನ್ ಸೇರಿದಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸಿಲ್ದಾರರು, ಗ್ರಾ.ಪಂ. ಸದಸ್ಯರು, ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *