ಬೆಂಗಳೂರು: ಭಾರೀ ಬಿಸಿಲಿನ ತಾಪಕ್ಕೆ ಕಾದ ಕಾವಲಿಯಾಗಿದ್ದ ರಾಜ್ಯದ ವಿವಿಧ ಕಡೆ ಮಳೆಯಾಗಿದೆ. ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಗುಡುಗು ಸಹಿತ ಮಳೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ/ಹಗುರ ಮಳೆಯಾಗುವ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ನಿನ್ನೆ (ಏ.20) ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಲವು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಬೇಸಿಗೆಯಲ್ಲಿ ಸುರಿದ ಅಕಾಲಿಕ ಮಳೆಗೆ ಜನ ಖುಷಿಯಾಗಿದ್ದಾರೆ. ಸತತ ಅರ್ಧಗಂಟೆಗೂ ಅಧಿಕ ಕಾಲ ಸುರಿದ ವರುಣ, ಸುಡು ಬಿಸಿಲಿನ ಧಗೆಗೆ ಕಂಗಟ್ಟಿದ್ದ ಭೂಮಿ ತಂಪಾಗಿದೆ.



