ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದಲ್ಲದೆ ನಾಳ ಬುಧವಾರ (ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೂಸಹ ರಜೆ ಘೋಷಿಸಲಾಗಿದೆ.
ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಡಿ.10) ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇಮದಿನಿಂದ (ಡಿ. 10) ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತ್ಯಕ್ರಿಯೆ: ಎಸ್. ಎಂ. ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು. ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 8 ರವರೆಗೆ ಅಂತಿಮ ದರ್ಶನ ನಡೆಯಲಿದ್ದು, ಬುಧವಾರ ಬೆಳಿಗ್ಗೆ 10.30 ರಿಂದ ಮದ್ದೂರಿನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ’ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ಸಂತಾಪ; ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ನೋವು ನನಗಾಗಿದೆ.ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಾ, ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದರು.
ಬೊಮ್ಮಾಯಿ ಸಂತಾಪ; ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್. ಎಂ. ಕೃಷ್ಣ ಅವರು ನಿಧನರಾಗಿರುವ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮಿತ ಭಾಷಿ, ಸೌಮ್ಯ ಸ್ವಭಾವದ ಎಸ್. ಎಂ. ಕೃಷ್ಣ ಅವರು ಸುಮಾರು ಆರು ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜ್ಯಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಸಂತಾಪ ಸೂಚಿಸಿದ್ದಾರೆ.



