ಬೆಂಗಳೂರು : ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವಂತ 1246 ಸಾಮಾನ್ಯ ವೈದ್ಯರು, 824 ತಜ್ಞ ವೈದ್ಯರನ್ನು ಒಂದು ತಿಂಗಳ ಒಳಗಾಗಿ ನೇರನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ 1246 ಸಾಮಾನ್ಯ ವೈದ್ಯರು ಹಾಗೂ 824 ತಜ್ಞ ವೈದ್ಯರ ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 9,850 ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳು ಮಂಜೂರಾಗಿವೆ. ಈಗಾಗಲೇ 2018ರಲ್ಲಿ 224 ಹುದ್ದೆಗಳಿಗೆ ವಿಶೇಷ ನೇಮಕಾತಿಯಡಿ ಭರ್ತಿ ಮಾಡಿಕೊಳ್ಳಲಾಗಿದೆ. ಈಗಾಗಲೇ 7123 ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಾಕಿ 2,727 ಹುದ್ದೆಗಳು ಖಾಲಿ ಇವೆ ಎಂದರು. ಈ ಹುದ್ದೆಗಳಿಗೂ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.



