ಬೆಂಗಳೂರು: ಕಳೆದ ವರ್ಷ ಮುಂಗಾರು ಕೊರತೆಯಿಂದ ಕರ್ನಾಟಕ ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದೆ. ರಾಜ್ಯಕ್ಕೆ ಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರ ಹಗ್ಗಜಗ್ಗಾಟ ನಂತರ ಕೊನೆಗೂ 3,454 ಕೋಟಿ ಪರಿಹಾರ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಬೆಳೆ, ಕುಡಿಯಲು ನೀರಿಲ್ಲದೆ ಜನತೆ ರೋಸಿ ಹೋಗಿದ್ದಾರೆ. ಕೇಂದ್ರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆಗೆ ವಿಳಂಬ ಮಾಡಿದ್ದನ್ನು ಖಂಡಿಸಿ ರಾಜ್ಯ ಸರ್ಕಾರ ನಿರಂತರ ಹೋರಾಟ ಮಾಡಿತ್ತು. ಕೊನೆಗೂ ಸುಪ್ರೀಂ ಕೋರ್ಟ್ ವರೆಗೂ ಹೋಗಿತ್ತು. ಇದೀಗ ರಾಜ್ಯಕ್ಕೆ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ನೀಡಿದೆ.
ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ 18,174 ಕೋಟಿ ಬರ ಪರಿಹಾರಕ್ಕಾಗಿ ಕೇಂದ್ರದ ಮುಂದೆ ಬೇಡಿಕೆ ಇಟ್ಟಿತ್ತು. ಇದಾದ ಬಳಿಕ ಕೇಂದ್ರದ ತಂಡವೂ ಬಂದು ಬರ ಅಧ್ಯಯನ ನಡೆಸಿ ತೆರಳಿತ್ತು. ಆದರೆ, ಪರಿಹಾರ ಮಾತ್ರ ಬಿಡುಗಡೆಯಾಗಿದ್ದಿಲ್ಲ. ಹೀಗಾಗಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸಿದ್ದರಿಂದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.



