ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಮತ್ತೆ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ. ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಭರವಸೆ ನೀಡಿದ್ದಾರೆ.
ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ಥಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ ಎಂದರು.
ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದೆ. ಇದಕ್ಕೆಂದು ಪ್ರಾಯೋಗಿಕ ಆಪ್ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.