ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಸಿಗದ ಹಿನ್ನೆಲೆ 5 ಕೆ.ಜಿ ಅಕ್ಕಿಗೆ ಹಣವನ್ನು ನೀಡಲು ನಿರ್ಧರಿಸಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನು ಕೊಡುತ್ತುದ್ದು, ಇದಕ್ಕೆ ರಾಜ್ಯ ಸರ್ಕಾರ 5 ಕೆಜಿ ಸೇರಿಸುವುದಾಗಿ ಘೋಷಿಸಿತ್ತು. ಇದೀಗ ಅಗತ್ಯಕ್ಕೆ ತಕ್ಕಷ್ಟು ಅಕ್ಕಿ ಸಿಗದಕ್ಕೆ ಹಣ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ ಪ್ರತಿ ಕೆಜಿಗೆ 34 ರೂಪಾಯಿಗಳಂತೆ 170 ರೂ. ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಜುಲೈ ತಿಂಗಳಿನಿಂದಲೇ ಬಿಪಿಎಲ್ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ. ಅಕ್ಕಿಯ ದಾಸ್ತಾನು ಆಗುವವರೆಗೂ ಹಣವನ್ನು ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.



