ಬೆಂಗಳೂರು: ರಾಜ್ಯ ಸರ್ಕಾರ 7ನೇ ರಾಜ್ಯ ವೇತನ ಆಯೋಗ ಜಾರಿ ಬಳಿಕ ಇದೀಗ ತುಟ್ಟಿ ಭತ್ಯೆಯ ದರಗಳನ್ನು (DA Hike) 2024ರ ಜುಲೈ 1ರಿಂದ ಜಾರಿಗೆ ಬರುವಂತೆ 2.25% ಹೆಚ್ಚಳ ಮಾಡಿ ಆದೇಶಿಸಿದೆ. ಇದರಿಂದ ಪ್ರಸ್ತುತ ಮೂಲ ವೇತನದ ಡಿಎ ದರ ಶೇ.8.50 ರಿಂದ 10.75 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ.ಕೆ ಅವರು ಆದೇಶ ಹೊರಡಿಸಿದ್ದಾರೆ. 2024ರ ಆ.23ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತ ವೇತನದಾರರಿಗೆ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅವಕಾಶ ಕಲ್ಪಿಸಲಾಗಿತ್ತು.
ಕೇಂದ್ರ ಸರ್ಕಾರದ ಆದೇಶವನ್ನು ರಾಜ್ಯ ಸರ್ಕಾರವು ಪರಿಗಣಿಸಿ, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು 2024ರ ಜುಲೈ 1ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ ಶೇ. 8.50 ರಿಂದ 10.75 ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಲು ಸರ್ಕಾರ ಹರ್ಷಿಸುತ್ತದೆ. ಆದರೆ, ಪರಿಷ್ಕೃತ ತುಟ್ಟಿ ಭತ್ಯೆಯ ದರಗಳ ಆರ್ಥಿಕ ಲಾಭವು 2024 ಆ.1ರಿಂದ ಲಭ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಇದರಿಂದ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ-ಮಂಡಳಿ-ಅನುದಾನಿತ ಸಂಸ್ಥೆಗಳ ಸುಮಾರು 3.00 ಲಕ್ಷ ನೌಕರರು, ಸುಮಾರು 4.50 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.25% ತುಟ್ಟಿಭತ್ಯೆ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ ತಿಳಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2024ರ ಆ.1ರಿಂದ ಬಾಕಿ ಇದ್ದ ತುಟ್ಟಿಭತ್ಯೆ ಬಿಡುಗಡೆ ಮಾಡುವ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸುತ್ತದೆ ಎಂದು ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.



