ಹಾವೇರಿ: ಉಕ್ರೇನ್‌ನಲ್ಲಿ ರಷ್ಯಾದ ಮಿಲಿಟರಿ ದಾಳಿಗೆ ತುತ್ತಾಗಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡ ಪಾರ್ಥಿವ ಶರೀರ ಇಂದ ಸ್ವಗ್ರಾಮ ರಾಣೇಬೆನ್ನೂರು ತಾಲೂಕಿನ ಚಳಗೇರಿಗೆ ಆಗಮಿಸಿದ್ದು, ನವೀನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ನವೀನ್ ಪಾರ್ಥಿವ ಶರೀರವನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ ನೆರವೇರಿಸಲಾಗುತ್ತಿದ್ದು, ಬಳಿಕ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ. ನವೀನ್ ಮೃತಪಟ್ಟು 21 ದಿನಗಳ ಬಳಿಕ ಪಾರ್ಥಿವ ಶರೀರ ಮನೆಗೆ ಆಗಮಿಸಿದ್ದು, ನವೀನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮನ ಮಿಡಿಯುವಂತಿತ್ತು. ಗ್ರಾಮದಲ್ಲಿ ಶೋಕದ ವಾತಾವರಣ ಮಡುಕಟ್ಟಿದ್ದು, ಗ್ರಾಮಸ್ಥರೆಲ್ಲರು ನವೀನ್ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ.
ಅಂತಿಮ ದರ್ಶನದ ಬಳಿಕ ಚಳಗೇರಿ ಗ್ರಾಮದಲ್ಲಿ ನವೀನ್ ಮೆರವಣಿಗೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇಡೀ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಗುತ್ತದೆ. ನವೀನ್ ದೇಹದಾನಕ್ಕೆ ಪೋಷಕರು ನಿರ್ಧರಿಸಿರುವಂತೆ ಮೆರವಣಿಗೆ ಬಳಿಕ ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನವೀನ್ ದೇಹವನ್ನು ಹಸ್ತಾಂತರ ಮಾಡಲಾಗುತ್ತಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಚಳಗೇರಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ. ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಸ್ಥಳೀಯ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಉಕ್ರೇನ್‌ನಿಂದ ಹಿಂದಿರುಗಿರುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ನವೀನ್ ಸ್ನೇಹಿತರು ಆಗಮಿಸುತ್ತಿದ್ದಾರೆ. ಸುಮಾರು 3 ಗಂಟೆಗಳ ಕಾಲ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ.



