ಬೆಂಗಳೂರು: ರಾಜ್ಯದಲ್ಲಿ ಆರಂಭದಲ್ಲಿಯೇ ಮುಂಗಾರು ಮಳೆ ಕೈ ಕೊಟ್ಟಿದೆ. ಮುಂಗಾರು ಪೂರ್ವದಲ್ಲಿ ಅಬ್ಬರಿಸಿದ್ದ ಮಳೆ, ಮುಂಗಾರು ಎಂಟ್ರಿ ಪಡೆದು 15 ದಿನ ಕಳೆದರೂ ರಾಜ್ಯದಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಜೂನ್ 1 ರಿಂದ 18 ರವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 109 ಮಿಮೀ ಮಳೆಯಾಗಬೇಕಿತ್ತು. ಆದರೆ, 78 ಮಿಮೀ ಮಳೆಯಾಗಿದ್ದು, ಶೇ.28 ಮಳೆ ಕುಂಠಿತವಾಗಿದೆ. ಕರಾವಳಿಯಲ್ಲಿ ಶೇ. 64, ಮಲೆನಾಡು ಶೇ 61, ಉತ್ತರ ಒಳನಾಡು ಶೇ.13 ಮಳೆ ಕೊರತೆಯಾದರೆ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.100 ಹೆಚ್ಚು ಮಳೆ ಬಿದ್ದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಜೂನ್ 19 ರಿಂದ 22 ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ ಮತ್ತು ಚಿತ್ರದುರ್ಗದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಮಳೆ ಬೀಳಲಿದೆ.



