ಡಿವಿಜಿ ಸುದ್ದಿ, ಬೆಂಗಳೂರು: ಬಸವಕಲ್ಯಾಣದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಕೊರೊನಾ ವೈರಸ್ ತಗುಲಿದ ಕಾರಣ ನಾರಾಯಣ ರಾವ್ ಅವರನ್ನು ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿತ್ತು. ಇದರಿಂದ ಅವರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ಕೊಡಲಾಗುತ್ತಿತ್ತು. ಇಂದು ಮಧ್ಯಾಹ್ನ ನಿಧಾನರಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ನಿರ್ದೇಶಕ ಡಾ. ಮನಿಷ್ ರೈ ತಿಳಿಸಿದ್ದಾರೆ.
66 ವರ್ಷದ ನಾರಾಯಣರಾವ್‍ಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ಇತ್ತು. ಆಸ್ಪತ್ರೆಗೆ ದಾಖಲಾದ ಎರಡೇ ದಿನಕ್ಕೆ ಅವರ ಸ್ಥಿತಿ ಗಂಭೀರವಾಗಿತ್ತು. ಅಂದಿನಿಂದ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಅವರಿಗೆ ಬಹುಅಂಗಾಂಗ ವೈಫಲ್ಯ ಕಾಣಿಸಿಕೊಂಡಿತ್ತು. ಇದರಿಂದ ಮಣಿಪಾಲ್‍ನ ವಿಶೇಷ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ, 24 ದಿನ ಕೊರೊನಾ ವಿರುದ್ಧ ಹೋರಾಡಿದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಮಾಜಿ ಸಿಎಂಗಳಾದ ಡಿ.ದೇವರಾಜ್ ಅರಸ್, ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವು ರಾಜಕಾರಣಿಗಳ ಜೊತೆ ರಾವ್ ಗುರುತಿಸಿಕೊಂಡಿದ್ದರು. ಕೋಳಿ ಸಮಾಜದಲ್ಲಿ ಹುಟ್ಟಿದ ಅವರು ಬಿಎ ಪದವಿ ಪಡೆದಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರಲ್ಲಿ ಅರಣ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.



