ಬೆಂಗಳೂರು: ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್ 21ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜೂನ್ 23 ರಂದು ಈ ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು, ಬಿರುಗಾಳಿ ಸಹಿತ ಕರಾವಳಿ ಮತ್ತು ಪಶ್ಚಿಮ ಘಟ್ಟದ ಪಕ್ಕದ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಗಾಳಿ, ಮಳೆಗೆ ಭೂ ಕುಸಿತದ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದ.ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ.
ಚಂಡಮಾರುತದ ಪ್ರಭಾವ ಕರ್ನಾಟಕದ ಕರಾವಳಿ ಉದ್ದಕ್ಕೂ ಬೀರಲಿದ್ದು, ಗಂಟೆಗೆ 35 ಕಿ.ಮೀನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ. ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಜೂನ್ 22ರಿಂದ 24ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಜೊತೆ ಭೂ ಕುಸಿತದ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಸಮುದ್ರ ಭಾಗದಲ್ಲಿ 45 ರಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ.



