ಬೆಂಗಳೂರು: ತೀವ್ರ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ತುಸು ನೆಮ್ಮದಿಯ ಸುದ್ದಿ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು , ಮಲೆನಾಡು ಹಾಗೂ ಕೊಡಗಿನಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 20ರವರೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಮಲೆನಾಡು ಭಾಗದ ಕೊಡಗು ಜಿಲ್ಲೆಯಲ್ಲಿ 6 ಸೆಂ.ಮೀನಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಮುಂಗಾರು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಕರಾವಳಿಯ ಭಾಗದಲ್ಲಿ ಮುಂದಿನ ಐದು ದಿನ, ದಕ್ಷಿಣ ಒಳನಾಡಿದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸೆ.17 ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಲಿದೆ.