ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಇಂದು (ಸೆ.24) ಅನುಮತಿ ನೀಡಿದ್ದು, ರಾಜ್ಯಪಾಲರ ತೀರ್ಮಾನವನ್ನು ಕೋರ್ಟ್ ಎತ್ತಿ ಹಿಡಿದಿದ್ದು, ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಈ ಬಗ್ಗೆ ತೀರ್ಪು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರು ತಮ್ಮ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರ. ಸಿಎಂ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಕರ್ನಾಟಕ ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ವಿಸ್ತಾರವಾದ ವಾದ-ವಿವಾದ ಆಲಿಸಿದ್ದ ನ್ಯಾಯಪೀಠ ಸೆ. 24ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು.
ಏಕಸದಸ್ಯ ಪೀಠದ ತೀರ್ಮಾನವನ್ನು ದ್ವಿಸದಸ್ಯ ಪೀಠದಲ್ಲಿ ಪ್ರಶ್ನೆ ಮಾಡಲು ಅವಕಾಶವಿದೆ. ಅಲ್ಲದೇ ಸುಪ್ರೀಂಕೋರ್ಟ್‌ನಲ್ಲಿ ಸಹ ಕಾನೂನು ಹೋರಾಟವನ್ನು ನಡೆಸಲು ಆಯ್ಕೆಗಳಿವೆ. ಆದ್ದರಿಂದ ಸಿದ್ದರಾಮಯ್ಯ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ಕ್ರಮ ಸರಿಯಾಗಿದೆ. ಮುಖ್ಯಮಂತ್ರಿಗಳ ಕುಟುಂಬಸ್ಥರು ಇದರ ಫಲಾನುಭವಿಗಳಾಗಿದ್ದಾರೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಆದೇಶದಲ್ಲಿ ಕೋರ್ಟ್ ಖಾಸಗಿ ದೂರುದಾರರೇ ಅನುಮತಿ ಕೋರಬಹುದು ಎಂದು ತೀರ್ಪಿನ ತಿಳಿಸಿದೆ. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಕಾನೂನೂ ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ.
ಹೈಕೋರ್ಟ್ ತೀರ್ಪು ಬರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ತೀರ್ಪು ಬಂದ ಬಳಿಕ ಅವರು ಗೃಹ ಕಛೇರಿ ಕಾವೇರಿಗೆ ವಾಪಸ್ ಆದರು, ಆದರೆ ಹೋಟೆಲ್ ಬಳಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.