ಬೆಂಗಳೂರು: ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮಳೆ, ಆಗಸ್ಟ್ ತಿಂಗಳ ಆರಂಭದಿಂದ ಸದ್ದಡಗಿದ್ದ ಮಳೆ ಆಗಸ್ಟ್ 20ರಿಂದ ರಾಜ್ಯದ ಹಲವೆಡೆ ಭಾರೀ ಮಳೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 20 ನಂತರ ಮುಂಗಾರು ಮತ್ತೆ ಚುರುಕು ಪಡೆಯಲಿದ್ದು, ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಇಲ್ಲದೆ ಬಿಸಿಲಿನ ತಾಪಮಾನಕ್ಕೆ ಜನ ಬೇಸತ್ತು ಹೋಗಿದ್ದಾರೆ. ಮುಂಗಾರು ನಂಬಿಕೊಂಡು ಬಿತ್ತಿದ್ದ ಬೆಳೆಗಳೆಲ್ಲ ಒಣಗುತ್ತಿವೆ.ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಅಬ್ಬರಿಸುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಆಗಸ್ಟ್ 20ರ ಬಳಿಕ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲಿ ಮಳೆಯಾಗಲಿದೆ.