ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ವರುಣ ದೇವ ಕೃಪೆ ತೋರಿದ್ದಾನೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ಮಳೆ ಇನ್ನೂ ಮೂರ್ನಾಲ್ಕು ದಿನ (ಮೇ 24ರವರೆಗೆ) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡದಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದ್ದು, ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ.
ಮೇ 22ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ.
ರಾಜ್ಯಕ್ಕೆ ಜೂನ್ ಮೊದಲ ವಾರವೇ ಮುಂಗಾರು ಮಳೆ ಪ್ರವೇಶವಾಗುವ ಸಾಧ್ಯತೆಗಳಿದ್ದು, ಮುಂಗಾರು ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಈ ಬಾರಿ ಒಂದೆರಡು ದಿನ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ ಬರುವ ಸಾಧ್ಯತೆ ಇದೆ. ಕಳೆದ ವರ್ಷ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶ ತಡವಾಗಿ ಇಡೀ ವರ್ಷ ಪೂರ್ತಿ ನಿರೀಕ್ಷಿತ ಮಳೆ ಸುರಿಯಲಿಲ್ಲ. ಇದರಿಂದ ತೀವ್ರ ಬರ ಆವರಿಸಿತ್ತು. ಕರ್ನಾಟಕದ ಒಳನಾಡಿನಲ್ಲಿ 0.9 ಎತ್ತರದ ವರೆಗೆ ಟ್ರಫ್ ಇದೆ. ಇದರ ಪ್ರಭಾವದಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.



