ಬೆಂಗಳೂರು: ರಾಜ್ಯದ ಕೆಲ ಪ್ರದೇಶದಲ್ಲಿ ಎರಡು ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ರಾಯಚೂರು, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ಬು ಹವಾಮಾನ ಇಲಾಖೆ ನೀಡಿದೆ. ಇದಲ್ಲದೆ ಈ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.
ಕೇರಳದ ಕರಾವಳಿಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಮಧ್ಯ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತದ ಉತ್ತರದ ಚಲನೆಯ ಪರಿಣಾಮವಾಗಿ ಮಳೆ ಆಗಲಿದೆ. ಮುಂದಿನ ಐದು ದಿನಗಳ ಕಾಲ ಮಳೆ ಕಡಿಮೆಯಾಗುವ ನಿರೀಕ್ಷೆಯಿದ್ದರೂ ಜೂನ್ ಮೊದಲ ವಾರದ ವೇಳೆಗೆ ನೈರುತ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ ಎಂದು ಐಎಂಡಿ ಮುನ್ಸೂಚನೆ ತಿಳಿಸಿದೆ.
ದಾವಣಗೆರೆ, ಹಾಸನ, ಮಂಡ್ಯ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉಡುಪಿ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆ ಆಗಲಿದೆ.



