ಬೆಂಗಳೂರು: ಕಳೆದ ಎರಡು ವಾರದದಿಂದ ಸುರಿಯುತ್ತಿರುವ ಮುಂಗಾರು ಮಳೆ ಅಬ್ಬರಕ್ಕೆ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಎಲ್ಲ ಕಡೆ ಭಾರೀ ಮಳೆಯಾಗುತ್ತಿದ್ದು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಂತೂ ವರುಣ ಅಬ್ಬರ ಜೋಗಾದೆ. ಇದರಿಂದ ಗುಡ್ಡ ಕುಸಿತ, ಮತ್ತೊಂದೆಡೆ ಹಳ್ಳ- ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಳೆ ಇನ್ನೂ ಜು. 24 ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಹಾಗೂ ಕರಾವಳಿ ಭಾಗದ ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಎಲ್ಲೆಡೆ ಅತಿ ಹೆಚ್ಚಿನ ಮಳೆಯಾಗಿದೆ.ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ.ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಮತ್ತಷ್ಟು ಮಳೆ ಹೆಚ್ಚಲಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹರಿಹರ, ಹೊನ್ನಾಳಿ, ನ್ಯಾಮತಿ, ದಾವಣಗೆರೆ, ಜಗಳೂರು ತಾಲ್ಲೂಕಿನಲ್ಲಿ ಮಳೆ ಅಬ್ಬರಿಸುತ್ತಿದೆ.
ಕಳೆದ ವರ್ಷ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ, ಈ ವರ್ಷ ನಿರೀಕ್ಷೆಗೂ ಹೆಚ್ಚಿನ ಮಳೆಯಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗುತ್ತಿದೆ. ಕಳೆದ 15 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಮಹಾಮಳೆ ಜುಲೈ 24ರವರೆಗೂ ಇರಲಿದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ , ಮಲೆನಾಡಿನ ಜಿಲ್ಲೆಗಳಲ್ಲಿ ಬಿರು ಗಾಳಿ ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 19 ರಿಂದ 23 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 21 ರಿಂದ 23 ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.



