ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆಯಲಿದ್ದು, ಮುಂದಿನ 24 ಗಂಟೆಯಲ್ಲಿ ಕರಾಡವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಕೂಡ ಅದೇ ರೀತಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟಿಸಲಿದೆ. ಬೆಳಗಾವಿಯ ಹಲವು ಕಡೆ ಮಳೆರಾಯನ ಅಬ್ಬರ ಇರಲಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸಂಜೆ ನಂತರ ಭಾರಿ ಮಳೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.
ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.



