ಬೆಂಗಳೂರು: ರಾಜ್ಯದಲ್ಲೆ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಎರಡ್ಮೂರು ದಿನ ಮಳೆ ಅಬ್ಬರಿಸಲಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ತುಮಕೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ
ಚಿತ್ರದುರ್ಗ, ದಾವಣಗೆರೆಯಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ, ಅಡಕೆ, ರಾಗಿ, ಈರುಳ್ಳಿ ಬೆಳೆ ಹಾನಿಯಾಗಿದೆ. ಜಗಳೂರು ತಾಲೂಕಿನಲ್ಲಿ ಅಡಕೆ, ಈರುಳ್ಳಿ, ಶೇಂಗಾ, ಮೆಕ್ಕೆಜೋಳದ ಹೊಲಗಳು ಜಲಾವೃತವಾಗಿವೆ. ಚನ್ನಗಿರಿ ತಾಲೂಕಿನ ಅಡಿಕೆ, ಗದ್ದೆಗಳು ಜಲಾವೃತವಾಗಿವೆ.



