ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಜಿಲ್ಲೆಗಳಲ್ಲಿ ನದಿ, ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಈಗಾಗಲೇ ಸುರಿದ ಭಾರೀ ಮಳೆಗೆ ಜನಜೀವನ ತತ್ತರಗೊಂಡಿದೆ. ಈ ನಡುವೆ ಇನ್ನೂ ಐದಾರು ದಿನ ಜೋರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ತೀವ್ರ ಚಂಡಮಾರುತ ಸಂಭವಿದೆ. ಇದರ ಪರಿಣಾಮ ಜೋರು ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



