ಬೆಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಚಂಡಮಾರುತ ಪರಿಣಾಮ ಕರ್ನಾಟಕ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ (rain) ಅಬ್ಬರ ಹೆಚ್ಚಾಗಿದೆ. ಇಂದಿನಿಂದ ಮೂರು ದಿನ (ಮೇ 23 ವರೆಗೆ) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡಗು, ಮಿಂಚು ಸಹಿತ ಕರಾವಳಿ ಭಾಗದಲ್ಲಿ ಈಗಾಗಲೇ ಮಳೆ ಹೆಚ್ಚಾಗಿದೆ. ಜೂನ್ ತಿಂಗಳ ಮುಂಗಾರು ಪೂರ್ವದಲ್ಲಿಯೇ ಮಳೆ ಅಬ್ಬರ ಜೋರಾಗಿದೆ. ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್
ಮುಂದಿನ ಎರಡು ದಿನಗಳ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿ ಒಟ್ಟು ಆರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದೆ. ಈ ಸಂಬಂಧ ಐಎಂಡಿ ರೆಡ್ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಮಲೆನಾಡು ಭಾಗದಲ್ಲಿ ಎಚ್ಚರಿಕೆ
ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 20 ಅಧಿಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು, ಮಡಿಕೇರಿ ಸೇರಿದಂತೆ ಮಲೆನಾಡು ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.



