ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಚಂಡಮಾರುತ ಸೃಷ್ಠಿಯಾಗಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ
ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ , ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿಯಲ್ಲಿ ಆ. 18ರಂದು ರೆಡ್ ಅಲರ್ಟ್ ಇರಲಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆ. 19 ಹಾಗೂ 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 21, 22ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಬಿರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹೆಚ್ಚಿನ ಗಾಳಿ ಇರಲಿದ್ದು ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



