ಬೆಂಗಳೂರು: ಸತತ ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಮಳೆ ಇನ್ನೂ ಮೂರು ದಿನ ಮುಂದುವರೆಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಸ್ತೆಗಳು ಜಲಾವೃತಗೊಂಡಿದ್ದರಿಂದವ ಕೆಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮೈಸೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಿಂದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. 17 ಜಿಲ್ಲೆಗಳಿಗೆ ಸೆ.2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.