ಬೆಂಗಳೂರು: ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುವುದು. ಈ ತಿಂಗಳ ಮೂರನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಜೂನ್ 1 ರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಒತ್ತಾಯ ಕೇಳಿ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಹವಾಮಾನ ಇಲಾಖೆಯಿಂದ ಮಾಹಿತಿ ಪಡೆದುಕೊಂಡೇ 15 ದಿನಗಳ ಮೊದಲೇ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದರು.
ಕೊರೋನಾ ಕಾರಣದಿಂದಾಗಿ ಮಕ್ಕಳ ಕಲಿಕಾ ಮಟ್ಟದಲ್ಲಿ ಹಿನ್ನಡೆಯಾಗಿದೆ. ಹೀಗಾಗಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭಿಸಲಾಗುವುದು. ಮೇ 16 ರಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಎಸ್‌ಎಸ್‌ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂಕಗಳ ಕ್ರೋಡೀಕರಣ ಮಾಡಲಾಗುತ್ತಿದೆ. ಮೇ ಮೂರನೇ ವಾರ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದರು.