ಬೆಂಗಳೂರು: ತೀವ್ರ ಬರದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದ ಎರಡ್ಮೂರು ದಿನದಿಂದ ದಕ್ಷಿಣ, ಉತ್ತರ ಒಳನಾಡು, ಕರಾವಳಿ, ಮಲೆನಾಡು ಸೇರಿದಂತೆ ಅನೇಕ ಕಡೆ ಮಳೆ ಅಬ್ಬರಿಸುತ್ತಿದೆ. ಇಂದಿನಿಂದ (ಮೇ 12). ನಾಲ್ಕು ದಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ 3 ಜಿಲ್ಲೆಗಳಲ್ಲಿ ಹಲವೆಡೆ ಮಾತ್ರ ಭಾರೀ ಮಳೆಯಾಗಲಿದೆ. ನಾಳೆಯಿಂದ (ಮೇ 13) ಉತ್ತರ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದ್ದು, ಬುಧವಾರದವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಹಾಗೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಸೇರಿ ಒಟ್ಟು 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಮಳೆಯಾಗುವ ಪ್ರದೇಶಗಳಲ್ಲಿ ಗುಡುಗು-ಮಿಂಚಿನ ಜತೆಗೆ 40 ಕಿ.ಮೀ. ವೇಗದಲ್ಲಿ ಬಿರುಗಾಳಿಯೂ ಬೀಸುವ ಸಾಧ್ಯತೆಯೂ ಇದೆ
ರಣ ಬಿಸಿಲಿನ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಸತತ ಬರದಿಂದ ಕೆಂಗೆಟ್ಟಿದ್ದ ಜನ ಹಾಗೂ ಜಾನುವಾರುಗಳಿಗೆ ಈ ಮಳೆಯಿಂದ ನೀರು ಹಾಗೂ ಮೇವಿನ ಅಭಾವ ನೀಗುವ ಸಾಧ್ಯತೆ ಇದೆ. ಜತೆಗೆ ಕೃಷಿ ಕಾರ್ಯಗಳು ಸಹ ಚುರುಕು ಪಡೆದುಕೊಳ್ಳಲಿವೆ.
ಮೇ 12ರಂದು ಶಿವಮೊಗ್ಗ, ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ಮೇ 13 ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರದಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



