ಬೆಳಗಾವಿ: ಅವಧಿ ಮುಗಿದು ಐದು ವರ್ಷಗಳ ನಂತರ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಆಸಕ್ತಿ ವಹಿಸಿದೆ. ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಂಡಿದ್ದು, 2026ರ ಏಪ್ರಿಲ್ ಒಳಗೆ ಪೂರ್ಣಗೊಳಿಸಲು ಸಂಪುಟ ಸಭೆ ನಿರ್ಧರಿಸಿದೆ.
ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 2016 ಏಪ್ರಿಲ್‌ನಲ್ಲಿ ಚುನಾವಣೆ ನಡೆದಿತ್ತು. ಅಲ್ಲಿಂದ ಇಲ್ಲಿವರೆಗೂ ಚುನಾವಣೆ ನಡೆಸುವುದಕ್ಕೆ ಸರ್ಕಾರ ಮುಂದಾಗಿರಲಿಲ್ಲ. 2016ರಲ್ಲಿ ಆಯ್ಕೆಯಾಗಿದ್ದ ಸದಸ್ಯರ ಅವಧಿ 2021ರ ಏಪ್ರಿಲ್ 27ರಂದು ಮುಕ್ತಾಯವಾಗಿತ್ತು. ಅವಧಿ ಪೂರ್ಣಗೊಂಡ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ವಿವಿಧ ಕಾರಣಗಳಿಂದ ಚುನಾವಣೆ ನಡೆಸದೆ ವಿಳಂಬ ನೀತಿ ಅನುಸರಿಸಲಾಗಿತ್ತು.
2026ರ ಬೇಸಿಗೆ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸಲು ಅನುಕೂಲವಾಗುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ಸಹಕಾರ ನೀಡಲು ತೀರ್ಮಾನಿಸಲಾಗಿದೆ.ಕೆಲ ವರ್ಷಗಳ ಹಿಂದೆಯೇ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗವು ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಹಾಗೂ ಮೀಸಲಾತಿ ಕರಡುವನ್ನು ಪ್ರಕಟಿಸಿತ್ತು. ಆದರೆ, ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿತ್ತು. ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗಕ್ಕೆ ನೀಡಿತ್ತು.
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ವಿಳಂಬದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೊರೆ ಹೋಗಿತ್ತು. ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ 2023ರ ಡಿಸೆಂಬರ್‌ನಲ್ಲೇ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ನಂತರ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಲು ಸರ್ಕಾರ ರಚಿಸಿದ್ದ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಧಿಸೂಚನೆ ಹೊರಡಿಸಿತ್ತು. ಆದರೆ, ಮೀಸಲಾತಿ ನಿಗದಿ ಅಂತಿಮಗೊಳಿಸಿರಲಿಲ್ಲ. ಸಂಪುಟದ ನಿರ್ಧಾರದೊಂದಿಗೆ ನನೆಗುದಿಗೆ ಬಿದ್ದಿದ್ದ ಚುನಾವಣೆ ನಡೆಯುವುದು ಖಚಿತವಾಗಿದೆ.



