ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವಕೃಷಿ ಕಾಯಿದೆಗಳನ್ನು ವಾಪಸ್ ಪಡೆಯದಿದ್ದರೆ ರೈತರು ದಂಗೆ ಏಳುವುದು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತ ವಿರೋಧ ಕಾಯಿದೆಗಳನ್ನು ಜಾರಿಗೆ ತಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಜನತೆ ಮುಂಬರುವ ಚುನಾವಣೆಯಲ್ಲಿ ಜನತೆ ಮನೆಗೆ ಕಳಹಿಸುವುದು ಖಚಿತ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯಿದೆಗಳು ನಮಗೆ ಬೇಡ. ನಮಗೆ ಅನುಕೂಲ ಇಲ್ಲ. ಕಳೆದ 58 ದಿನಗಳಿಂದ ರೈತರು ದೆಹಲಿಯಲ್ಲಿ ಹಗಲು, ರಾತ್ರಿ ಎನ್ನದೆ, ಚಳಿ, ಗಾಳಿ, ಮಳೆ, ಬಿಸಿಲು ಲೆಕ್ಕಿಸದೆ ಚಳವಳಿ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಮನುಷ್ಯತ್ವ ಇದ್ದಿದ್ದರೆ ಚಳವಳಿ ಹತ್ತಿಕ್ಕುವ ಪ್ರಯತ್ನ ಮಾಡಬಾರದಿತ್ತು. ಹತ್ತು ಬಾರಿ ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿದೆ. ಆದರೆ, ಈ ವರೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿಲ್ಲ ಎಂದು ಕಿಡಿಕಾರಿದರು.
ಸುಪ್ರೀಂಕೋರ್ಟ್ ಮೂರು ಕಾಯಿದೆಗಳಿಗೆ ತಡೆ ಆದೇಶ ನೀಡಿದೆ. ಕಾಯಿದೆಗಳು ಸಂವಿಧಾನಬದ್ಧವಾಗಿ ಇದ್ದಿದ್ದರೆ ನ್ಯಾಯಾಲಯ ತಡೆಯಾಜ್ಞೆ ನೀಡುತ್ತಿರಲಿಲ್ಲ.ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಈ ಹಿಂದೆ ದೇಶದ ಜನತೆ ದಂಗೆ ಎದ್ದಿದ್ದರು. ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಎರಡನೇ ಸ್ವಾತಂತ್ರ್ಯ ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದರು.
ನಮ್ಮ ಹೋರಾಟ ಕೇವಲ ಭಾಷಣ ಮಾಡಿ ಮುಗಿಸುವುದಲ್ಲ. ಕಾಯಿದೆಗಳನ್ನು ವಾಪಸ್ ಪಡೆಯುವ ವರೆಗೆ ನಿರಂತರವಾಗಿ ಹೋರಾಟ ನಡೆಸುವ ಅಗತ್ಯವಿದೆ. ಪೊಲೀಸರು ನಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಅದಕ್ಕೂ ನಾವು ತಯಾರಾಗಿ ಇರಬೇಕು ಎಂದರು.



